ಚಿಕ್ಕಮಗಳೂರು :(ನ್ಯೂಸ್ ಮಲ್ನಾಡ್ ವರದಿ) ಮಲೆನಾಡಿನ ಭಾಗದ ಅರಣ್ಯ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕುಡಿದು ಮೋಜು ಮಸ್ತಿ ಹಾಗೂ ದಾಂಧಲೆ ಮಾಡುವವವರ ಸಂಖ್ಯೆ ಹೆಚ್ಚಾಗಿದೆ.
ಅರಣ್ಯ ಪ್ರದೇಶದಲ್ಲಿ ವಾಹನ ನಿಲ್ಲಿಸಿ ಮೋಜು-ಮಸ್ತಿ ಮಾಡುತ್ತಿದ್ದವರನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಶ್ನೆ ಮಾಡಿದ್ದಕ್ಕಾಗಿ ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ಸಮೀಪದ ಹೊನ್ನಾಳ ಅರಣ್ಯ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಗಾಳಿ ಗುಡ್ಡೆಯ ಕೆಲವು ವ್ಯಕ್ತಿಗಳು ಅರಣ್ಯ ಸಮೀಪದಲ್ಲಿ ವಾಹನವನ್ನು ನಿಲ್ಲಿಸಿ, ಮಧ್ಯಪಾನ ಮಾಡಿ ಮೋಜು-ಮಸ್ತಿ ಮಾಡುತ್ತಿದ್ದರೆನ್ನಲಾಗಿದೆ, ಈ ಕುರಿತು ಪ್ರಶ್ನೆ ಮಾಡಿದ ಉಪ ವಲಯ ಅರಣ್ಯಾಧಿಕಾರಿ ರಂಗಸ್ವಾಮಿ, ಅರಣ್ಯರಕ್ಷಕ ಮಂಜುನಾಥ್ ರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ದೊರೆತಿದೆ.
ಈ ಕುರಿತಾಗಿ ಪೊಲೀಸರಿಗೆ ದೂರು ನೀಡಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ ಹಾಗೂ ಆರೋಪಿಗಳನ್ನು ಶೀಘ್ರವಾಗಿ ಸೆರೆ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ. ಸರ್ಕಾರಿ ಅಧಿಕಾರಿಗಳಿಗೇ ರಕ್ಷಣೆ ದೊರೆಯದಿದ್ದಾಗ ಜನಸಾಮಾನ್ಯರ ಸ್ಥಿತಿ ಏನಾಗಬಹುದು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.


0 Comments