ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಭಾರೀ ಮಳೆ ಯಾಗುತ್ತಿದೆ ಸುತ್ತ ಮುತ್ತಲಿನ ಭಾಗಗಳಾದ ಬಣಕಲ್, ಗಬ್ಗಲ್, ಬಾಳೂರು ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ.
ಗಬ್ಗಲ್ ಗ್ರಾಮದ ಕೆಲವು ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಕೊಟ್ಟಿಗೆಹಾರದಲ್ಲಿ ರಸ್ತೆ, ಮಳಿಗೆಗಳಿಗೆ ಮಳೆ ನೀರು ನುಗ್ಗುತ್ತಿದೆ. ಡ್ರೈನೇಜ್ ಕಾಮಗಾರಿ ನಡೆಯುತ್ತಿರುವ ಹಿನ್ನಲೆ ಬಣಕಲ್ ಪಟ್ಟಣದ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ಈ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ. ಕಳೆದೊಂದು ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದು ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಇನ್ನೊಂದೆಡೆ ಮಳೆಗೆ ಕಾಫಿ ಉದುರುವ ಆತಂಕದಲ್ಲಿ ಕೃಷಿಕರು, ಬೆಳೆಗಾರರು ಆತಂಕ ಕ್ಕೀಡಾಗಿದ್ದಾರೆ. ಮೂಡಿಗೆರೆ ತಾಲೂಕಿನ ಸಬ್ಬೇನ ಹಳ್ಳಿಯಲ್ಲಿ ವಿದ್ಯುತ್ ಕಂಬ ಬಿದ್ದು ಆಟೋವೊಂದು ಜಖಂ ಗೊಂಡಿದೆ. ಈ ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ವಾಹನ ಸಂಚಾರ ಸ್ಥಗಿತೊಂಡಿದ್ದು ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಸ್ತೆಗೆ ಬಿದ್ದ ವಿದ್ಯುತ್ ಕಂಬದ ತೆರವು ಕಾರ್ಯಾಚರಣೆ ಆರಂಭಗೊಳಿಸಿದ್ದಾರೆ.
ತನು ಕೊಟ್ಟಿಗೆಹಾರ, ವರದಿಗಾರರು.


0 Comments