ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಬಂಗಾಳ ಕೊಲ್ಲಿ ಹಾಗೂ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಅತಿಯಾಗಿ ಮಳೆಯಾಗುವ ಪ್ರದೇಶಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮಲೆನಾಡು ಭಾಗದ ಹೆಚ್ಚಿನ ಜಿಲ್ಲೆಗಳಲ್ಲಿ ನ.16 ರಿಂದ 19 ರ ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ತಿಳಿಸಿದೆ.

ವಾಡಿಕೆಗಿಂತ ಅಧಿಕ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಬಹುತೇಕ ರೈತರು ಬೆಳೆದ ಬೆಳೆ ಹಾನಿಯಾಗಿದೆ ಮತ್ತು ಹಲವೆಡೆ ಮಳೆಯಿಂದಾಗಿ ದುರ್ಘಟನೆಗಳು ಸಂಭವಿಸುತ್ತಿದೆ. ಮುಂದಿನ ಕೆಲ ದಿನಗಳು ಜನರು ಅಗತ್ಯ ಮುನ್ನೆಚ್ಚರಿಕೆಯನ್ನು ವಹಿಸಿಕೊಂಡು ತಮ್ಮ ಕಾರ್ಯಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವುದು ಸೂಕ್ತ ಎಂದು ಅಧಿಕಾರಿಗಳು ಜನರಿಗೆ ತಿಳಿಸಿದ್ದಾರೆ.