ಚಿಕ್ಕಮಗಳೂರು :(ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದ ರಾಜಕೀಯ ವಿದ್ಯಮಾನಗಳು ದಿನದಿಂದ ದಿನಕ್ಕೆ ಬಹಳಷ್ಟು ಬದಲಾವಣೆಗೊಳ್ಳುತ್ತಿದೆ. ನಿನ್ನೆಯಷ್ಟೇ ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್ ಹೆಚ್ ದೇವರಾಜ್ ಅವರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರುವ ನಿರ್ಧಾರವನ್ನು ಪ್ರಕಟಿಸಿದ್ದರು. ಅಂತೆಯೇ ಇನ್ನೋರ್ವ ಚಿಕ್ಕಮಗಳೂರು ಜಿಲ್ಲೆಯ ಜೆಡಿಎಸ್ ಮುಖಂಡ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.

ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಜಿಲ್ಲೆಯ ಮುಖಂಡ ಬಿ ಹೆಚ್ ಹರೀಶ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಲು ತೀರ್ಮಾನಿಸಿದ್ದಾರೆ. ಜೆಡಿಎಸ್ ಪಕ್ಷಕ್ಕಾಗಿ ಸತತ ಪರಿಶ್ರಮ ಹಾಕಿದರೂ ಕೂಡ ಜೆಡಿಎಸ್ ನಲ್ಲಿ ಪರಿಗಣನೆಗೆ ತೆಗೆದುಕೊಳ್ಳದೆ ಕಾರಣ ಜೆಡಿಎಸ್ ತೊರೆದು ಕಾಂಗ್ರೆಸ್ ನಾಯಕರೊಂದಿಗೆ ಮಾತನಾಡಿ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಸೇರುವ ಕುರಿತು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚಿಸಿ ಈ ನಿರ್ಣಯವನ್ನು ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿ ಗುರುತಿಸಿಕೊಂಡು ನಂತರ ಬಿಜೆಪಿ ತೊರೆದು ಜೆಡಿಎಸ್ ಪಕ್ಷವನ್ನು ಹರೀಶ್ ಅವರು ಸೇರಿದ್ದರು. ಡಿಸೆಂಬರ್ 3 ನೇ ತಾರೀಖಿನಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಬಿ ಹೆಚ್ ಹರೀಶ್ ಅವರು ತಿಳಿಸಿದ್ದಾರೆ. 

ಮುಂಬರುವ ಚುನಾವಣೆಯನ್ನು ಎದುರಿಸಲು ಎಲ್ಲ ರಾಜಕೀಯ ಪಕ್ಷಗಳು ಈಗಿನಿಂದಲೇ ತಯಾರಿ ಆರಂಭಿಸಿದೆ. ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ರಾಜಕೀಯ ವಲಯದಲ್ಲಿ ಇನ್ನಷ್ಟು ಸಂಚಲನ ಉಂಟಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.