ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಮುಂದಿನ ನಾಲ್ಕು ದಿನಗಳ ಕಾಲ ಧಾರಾಕಾರವಾಗಿ ಅತೀ ಹೆಚ್ಚಿನ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಹಾಗೂ ಮಲೆನಾಡಿನ ಹಲವು ಕಡೆಗಳಲ್ಲಿ ನವೆಂಬರ್ 06 ರ ವರೆಗೆ ವಿಪರೀತ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗುವ ಸಾಧ್ಯತೆ ಕಂಡುಬಂದಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಇನ್ನುಳಿದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚಾಗಿ ಮಳೆಯಾಗಲಿದ್ದು  ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ರೈತರು ಹಾಗೂ ಮೀನುಗಾರರು ತಮ್ಮ ಕಾರ್ಯಕ್ಷೇತ್ರಕ್ಕೆ ತೆರಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ನಂತರವೇ ತೆರಳಬೇಕೆಂದು ಹವಾಮಾನ ಇಲಾಖೆ ಎಚ್ಚರಿಸಿದೆ.