ನರಸಿಂಹರಾಜಪುರ : (ನ್ಯೂಸ್ ಮಲ್ನಾಡ್ ವರದಿ) ಕಾಲೇಜು ವಿದ್ಯಾರ್ಥಿನಿಯೋರ್ವಳು ಭದ್ರಾ ನದಿಯ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಕೊಪ್ಪ ಗ್ರಾಮದ ಯುವತಿಗೆ ನದಿಯ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 18 ವರ್ಷ ಪ್ರಾಯದ ಸ್ಪಂದನ ಎಂಬ ಯುವತಿ ಆತ್ಮಹತ್ಯೆಗೆ ಶರಣಾದವಳು ಎಂದು ಗುರುತಿಸಲಾಗಿದೆ.
ಎಂದಿನಂತೆ ಕಾಲೇಜಿಗೆ ತೆರಳಿದ ಯುವತಿ ಸಂಜೆ ತಡವಾದರೂ ಮನೆಗೆ ಬಾರದ ಕಾರಣ ಪೋಷಕರು ಆತಂಕಕ್ಕೀಡಾಗಿದ್ದಾರೆ, ಮೆಣಸೂರು ಸೇತುವೆಯ ಸಮೀಪ ಶವವೊಂದು ನೀರಿನಲ್ಲಿ ತೇಲುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಸಾರ್ವಜನಿಕರ ಸಹಾಯದಿಂದ ಮೃತದೇಹವನ್ನು ಮೇಲಕ್ಕೆತ್ತಿ ವಿದ್ಯಾರ್ಥಿನಿಯನ್ನು ಗುರುತಿಸಿದ್ದಾರೆ.
ಸ್ಪಂದನಾಳ ತಂದೆ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು, ಈ ನೋವಿನಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಈ ಕುರಿತಾಗಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು ನಿಖರ ಕಾರಣ ಮುಂದಿನ ದಿನಗಳಲ್ಲಿ ತಿಳಿಯಬೇಕಿದೆ.

0 Comments