ಚಿಕ್ಕಮಗಳೂರು :(ನ್ಯೂಸ್ ಮಲ್ನಾಡ್ ವರದಿ) ದಿನಾಂಕ 16 ಡಿಸೆಂಬರ್ 2021 ರಿಂದ 20 ಡಿಸೆಂಬರ್ ವರೆಗೆ ಚಿಕ್ಕಮಗಳೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಜಿಲ್ಲೆಯಾದ್ಯಂತ ದತ್ತಮಾಲಾ ಅಭಿಯಾನ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದ್ದಾರೆ. ದತ್ತ ಜಯಂತಿಯ ಅಂಗವಾಗಿ ದತ್ತಪೀಠದಲ್ಲಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನಡೆಯುವುದರಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಡಿಸೆಂಬರ್ 16 ರಿಂದ 20 ರ ಬೆಳಗಿನ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಅತಿಹೆಚ್ಚಿನ ಸಂಖ್ಯೆಯಲ್ಲಿ ದತ್ತ ಮಾಲೆಯನ್ನು ಧರಿಸಿ ದತ್ತಮಾಲಾಧಾರಿಗಳು ದತ್ತಪೀಠಕ್ಕೆ ಪಾದುಕೆಗಳ ದರ್ಶನವನ್ನು ಪಡೆಯಲು ದಿನಾಂಕ 19 ಡಿಸೆಂಬರ್ ನಂದು ಬರುವ ಕಾರಣ ಪ್ರವಾಸಿಗರಿಗೆ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಹೊನ್ನಮ್ಮನ ಹಳ್ಳ ಹಾಗೂ ಶ್ರೀ ಗುರು ದತ್ತಾತ್ರೇಯ ಪೀಠಕ್ಕೆ ಭೇಟಿ ನೀಡುವುದನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇನ್ನುಳಿದಂತೆ ಜಿಲ್ಲೆಯ ಇತರ ಪ್ರೇಕ್ಷಣೀಯ ಸ್ಥಳಗಳನ್ನು, ಪ್ರವಾಸಿತಾಣಗಳಿಗೆ ಭೇಟಿ ನೀಡಲು ಯಾವುದೇ ನಿರ್ಬಂಧ ಹೇಳಲಾಗಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

0 Comments