ತೀರ್ಥಹಳ್ಳಿ : (ನ್ಯೂಸ್ ಮಲ್ನಾಡ್ ವರದಿ) ಗ್ರಾಮ ಪಂಚಾಯಿತಿಯಲ್ಲಿ ಸಭೆ ನಡೆಯುವಾಗ ಯಾವುದೋ ವಿಚಾರವಾಗಿ ಗ್ರಾಮ ಪಂಚಾಯತ್ ಸದಸ್ಯರೇ ಹೊಡೆದಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಗ್ರಾಮ ಪಂಚಾಯತ್ ನಲ್ಲಿ ಈ ಘಟನೆ ನಡೆದಿದೆ. ಗ್ರಾಮ ಪಂಚಾಯತ್ ನಲ್ಲಿ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ಕೆರೆ ಅಭಿವೃದ್ದಿಯ ಕುರಿತಾಗಿ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಸದಸ್ಯ ಸುರೇಶ್ ಹಾಗೂ ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಬ್ಬರು ತೀರ್ಥಹಳ್ಳಿ ಇನ್ನೊಬ್ಬರು ಕೋಣಂದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನಾ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.