ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಮಹಿಳೆಯೋರ್ವರು ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ಹಠಾತ್ತನೆ ಕಾಡುಕೋಣವೊಂದು ಮಹಿಳೆಯ ಮೇಲೆ ದಾಳಿ ಮಾಡಿ ಮಹಿಳೆಯನ್ನು ಗಾಯಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. 

ಇದನ್ನೂ ಓದಿ : ಚಿಕ್ಕಮಗಳೂರು : ಆನೆದಾಳಿಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಬಲಿ ಇನ್ನೊಂದು ವ್ಯಕ್ತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಬಸ್ನಿ ಗ್ರಾಮದ  ಜಯಮ್ಮ ಎಂಬುವವರ ಮೇಲೆ ಕಾಡುಕೋಣ ದಾಳಿ ನಡೆಸಿದೆ.  ಗಾಯಗೊಂಡ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದು ಜಯಮ್ಮ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಮಲೆನಾಡಿನ ಭಾಗದಲ್ಲಿ ನಿರಂತರವಾಗಿ ಕಾಡಾನೆ ಸೇರಿದಂತೆ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು ಮಲೆನಾಡಿಗರು ತೋಟ ಗದ್ದೆಗಳಲ್ಲಿ ಕೆಲಸ ಮಾಡಲು ಭಯಪಡುವಂತಹ ಸ್ಥಿತಿ ಎದುರಾಗಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. 

ಇಲಾಖೆಯ ಅಧಿಕಾರಿಗಳು ಈ ಕುರಿತು ಕ್ರಮಕೈಗೊಂಡು ಸಾರ್ವಜನಿಕರಿಗೆ ಕಾಡುಪ್ರಾಣಿಗಳಿಂದ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕ್ರಮವಹಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ತನು ಕೊಟ್ಟಿಗೆಹಾರ, ವರದಿಗಾರರು.