ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಸಮೀಪ ಸ್ಥಳವಾದ ಮಲ್ಲೇಶ್ವರದಲ್ಲಿ ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯಳ್ಳಂಬಳಸೆ ಗ್ರಾಮದ ವಸಂತ್ ಕುಮಾರ್ ಸಾವನ್ನಪ್ಪಿದ್ದಾರೆ.
ಲಾರಿ ಹಾಗೂ ಬೈಕ್ ನಡುವೆ ಅಪಘಾತ ಉಂಟಾದ ಕಾರಣ ವಸಂತ್ ಕುಮಾರ್ ಅವರ ತಲೆಗೆ ತೀವ್ರವಾಗಿ ಪೆಟ್ಟಾಗಿತ್ತು, ಕೂಡಲೇ ಅವರನ್ನು ಬೀರೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ತೀವ್ರವಾಗಿ ಗಾಯಗೊಂಡಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಶಿವಮೊಗ್ಗಕ್ಕೆ ದಾಖಲು ಮಾಡುವಂತೆ ವೈದ್ಯರು ಸೂಚಿಸಿದ್ದರು.
ವೈದ್ಯರ ಸೂಚನೆಯ ಮೇರೆಗೆ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ವಸಂತ್ ಕುಮಾರ್ ಅವರು ಕೊನೆಯುಸಿರೆಳೆದಿದ್ದಾರೆ. ಕೋಳಿಗಳನ್ನು ಸಾಗಾಣಿಕೆ ಮಾಡುತ್ತಿದ್ದ ಖಾಲಿಲಾರಿಯ ಚಾಲಕನ ಅಜಾಗರೂಕತೆಯಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಸಂತ್ ಕುಮಾರ್ ಅವರ ಕುಟುಂಬಸ್ಥರು ಹಾಗೂ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅತೀವ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಇಲಾಖೆಯ ಗೌರವಗಳೊಂದಿಗೆ ಯಳ್ಳಂಬಳಸೆ ಗ್ರಾಮದ ಸಾರ್ವಜನಿಕ ರುದ್ರಭೂಮಿಯಲ್ಲಿ ಮೃತ ವಸಂತ್ ಕುಮಾರ್ ಅವರ ಅಂತ್ಯಸಂಸ್ಕಾರ ನಡೆಯಿತು.





0 Comments