ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜಿಲ್ಲೆಯ 26 ಕಡೆಗಳಲ್ಲಿ ವಿಶೇಷ ದಾಳಿ ನಡೆಸಿ ಅಕ್ರಮವಾಗಿ ನಡೆಯುತ್ತಿದ್ದ ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದಾರೆ ಹಾಗೂ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ 26 ಅಬಕಾರಿ ದಾಳಿ ನಡೆಸಿರುವ ಅಧಿಕಾರಿಗಳು ಕಳ್ಳಭಟ್ಟಿ, ಅಕ್ರಮ ಮದ್ಯ ಮಾರಾಟ ಸೇರಿದಂತೆ ಅನೇಕ ಅಡ್ಡೆಗಳ ಮೇಲೆ ದಾಳಿ ನಡೆಸಿ ಅಕ್ರಮದಲ್ಲಿ ಭಾಗಿಯಾದವರನ್ನು  ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.

ಒಟ್ಟಾರೆ ಈ ದಾಳಿಯಲ್ಲಿ 26 ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು 24,106 ರೂಪಾಯಿ ಹಣ ಅಕ್ರಮ ಮದ್ಯ ಹಾಗೂ 6.5 ಲೀಟರ್ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ. 

ಈ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿರುವ ಪೊಲೀಸರು, ಅಕ್ರಮವಾಗಿ ಈ ರೀತಿಯಾದ ಚಟುವಟಿಕೆಗಳಲ್ಲಿ ಯಾರಾದರೂ ಪಾಲ್ಗೊಂಡಿರುವುದು ಕಂಡುಬಂದಲ್ಲಿ ಕಾನೂನಿನ ಅನುಸಾರ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಈ ರೀತಿ ಚಟುವಟಿಕೆಗಳ ಕುರಿತು ಮಾಹಿತಿ ಇದ್ದವರು ಯಾವುದೇ ಅಂಜಿಕೆ ಇಲ್ಲದೆ ಪೊಲೀಸರಿಗೆ ಮುಕ್ತವಾಗಿ ತಿಳಿಸಬಹುದು ಎಂದು ಮಾಹಿತಿ ನೀಡಿದ್ದಾರೆ.