ಕಳಸ : (ನ್ಯೂಸ್ ಮಲ್ನಾಡ್ ವರದಿ) ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಮರ ಬಿದ್ದು ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡಿನಲ್ಲಿ ಈ ಅವಘಡ ಸಂಭವಿಸಿದ್ದು, ಮಳೆಯ ಮಧ್ಯೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 22 ವರ್ಷ ಪ್ರಾಯದ ಪ್ರಿಯಾಂಕ ಎಂಬಾಕೆ ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು ಗುಡ್ಡ ಕುಸಿತ ರಸ್ತೆಗೆ ಮರ ಬೀಳುವುದು ಸೇರಿದಂತೆ ಹಲವು ಅವಘಡಗಳು ಸಂಭವಿಸುತ್ತಿದೆ. ಈ ಮಧ್ಯೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾರ್ಮಿಕ ಮಹಿಳೆಯ ಮೇಲೆ ಮರ ಬಿದ್ದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ.
ಮೃತರನ್ನು ಹೂವಿನ ಹಿತ್ತಲು ಗ್ರಾಮದ ಪ್ರಿಯಾಂಕ ಎಂದು ಗುರುತಿಸಲಾಗಿದ್ದು ಹರಪ್ಪನಹಳ್ಳಿ ಮೂಲದವರು ಎನ್ನಲಾಗಿದೆ. ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಮರ ಬಿದ್ದ ತಕ್ಷಣ ಮಹಿಳೆ ಸ್ಥಳದಲ್ಲೇ ಸಾವನಪ್ಪಿದ್ದಾರೆ ಎನ್ನಲಾಗಿದೆ.
ಚಿಕ್ಕಮಗಳೂರಿನಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆಯಾಗುತ್ತಿದ್ದು, ಕೃಷಿ ಕಾರ್ಯಗಳಲ್ಲಿ ತೊಡಗುವ ರೈತರು ಹಾಗೂ ಕಾರ್ಮಿಕರು ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ನಂತರದಲ್ಲಿ ಕೆಲಸ ಮಾಡುವುದು ಸೂಕ್ತ.






0 Comments