ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಕದ್ದುಮುಚ್ಚಿ ಬಾಲ್ಯವಿವಾಹ ಪ್ರಕರಣಗಳು ನಡೆಯುತ್ತಿದ್ದು , ಇದನ್ನು ಸಂಪೂರ್ಣವಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರು ಕೂಡ ಕಣ್ತಪ್ಪಿಸಿ 68 ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಲ್ಯವಿವಾಹದ ಪ್ರಕರಣಗಳು ಅಧಿಕವಾಗಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಇದನ್ನೂ ಓದಿ : ಆನೆದಾಳಿಯಿಂದ ರೋಸಿದ ರೈತರು ; ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕೂಡಿ ಹಾಕಿ ಆಕ್ರೋಶ

ಚಿಕ್ಕಮಗಳೂರು ಜಿಲ್ಲೆಯಲ್ಲಿನ 68 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹೆಚ್ಚಾಗಿ ಬಾಲ್ಯವಿವಾಹ ಪ್ರಕರಣಗಳು ವರದಿಯಾಗುತ್ತಿದ್ದು, ಈ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತೀವ್ರ ಜಾಗೃತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಾದ ಕೆ.ಎನ್.ರಮೇಶ್ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಜಿಲ್ಲಾ ಮಟ್ಟದ ಸಮಿತಿಗಳ ಅಧಿಕಾರಿಗಳಿಗೆ ಸೂಚಿಸಿದರು. 


ಬಾಲ್ಯವಿವಾಹ ಸಂಬಂಧಿಸಿದ ಪ್ರಕರಣಗಳಲ್ಲಿ ಪೋಕ್ಸೋ ಕಾಯ್ದೆಯನ್ನು ದಾಖಲಿಸಬೇಕೆಂದು ಸೂಚಿಸಿದರು. ಕಳೆದ ವರ್ಷದ ಮೊದಲ ತ್ರೈಮಾಸಿಕಕ್ಕಿಂತ ಈ ವರ್ಷ ವರದಿಯಾಗಿರುವ ಬಾಲ್ಯವಿವಾಹ ದೂರುಗಳ ಸಂಖ್ಯೆ ಅಧಿಕವಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಗೂ ಶಾಲೆಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತಾಗಿ ಅರಿವು ಮೂಡಿಸುವ ವ್ಯಾಪಕವಾದ ಜನಜಾಗೃತಿ ಮೂಡಿಸಲು ಕಟ್ಟುನಿಟ್ಟಾಗಿ ಸೂಚಿಸಿದರು. 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಅಂಗನವಾಡಿಗಳಿಗೆ ಹಾಗೂ ಇಲಾಖೆಯಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳಿಗೆ ನಿರಂತರವಾಗಿ ಭೇಟಿ ನೀಡಿ ಪರಿಶೀಲಿಸಬೇಕೆಂದು ತಿಳಿಸಿದರು. ಪ್ರಸಕ್ತ ವರ್ಷ ದಾಖಲಾಗಿರುವ 26 ಬಾಲ್ಯವಿವಾಹ ದೂರುಗಳಲ್ಲಿ 25 ಬಾಲ್ಯವಿವಾಹಗಳನ್ನು ತಡೆಗಟ್ಟಿ ಒಬ್ಬರನ್ನು ಸ್ವಯಂ ಸೇವಾ ಸಂಸ್ಥೆಯು ನೋಡಿಕೊಳ್ಳುತ್ತಿದೆ. ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಈ ಹಿಂದೆ ಎಫ್.ಐ.ಆರ್ ದಾಖಲಾದ 17 ಪ್ರಕರಣಗಳಲ್ಲಿ, 12 ಪ್ರಕರಣಗಳಲ್ಲಿ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆಂದು ಸಭೆಗೆ ಅಧಿಕಾರಿಗಳು ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು.

18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ನೀಡಲು ಸ್ವಾಧಾರ ಗೃಹ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಅನುಷ್ಠಾನಗೊಳಿಸಿತ್ತಿರುವ ಕಸ್ತೂರಿ ಬಾ ಸದನ ಸ್ವಯಂ ಸೇವಾ ಸಂಸ್ಥೆಗೆ ಅನುದಾನ ನೀಡುವಲ್ಲಿ ವಿಳಂಬವಾಗುತ್ತಿದೆ. ಸಕಾಲದಲ್ಲಿ ಅನುದಾನವನ್ನು ಬಿಡುಗೊಳಿಸಿಸುವಂತೆ ಜಿಲ್ಲಾಧಿಕಾರಿಗಳ ಬಳಿ ಕಸ್ತೂರಿ ಬಾ ಸದನದ ಕಾರ್ಯದರ್ಶಿ ಮೋಹಿನಿ ಸಿದ್ದೇಗೌಡ ಮನವಿ ಮಾಡಿದರು.


ಮೊದಲ ತ್ರೈಮಾಸಿಕದಲ್ಲಿ ದಾಖಲಾಗಿರುವ 28 ಕೌಟುಂಬಿಕ ಹಿಂಸೆ ಪ್ರಕರಣಗಳಲ್ಲಿ, 21 ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ. ಸಂರಕ್ಷಣಾಧಿಕಾರಿಗಳ ಹಂತದಲ್ಲಿಯೇ 14 ಪ್ರಕರಣಗಳು ಬಾಕಿ ಉಳಿದಿದ್ದು, ಪ್ರಕರಣಗಳು ದಾಖಲಾದ 30 ದಿನಗಳ ಅವಧಿಯಲ್ಲಿ ಇತ್ಯರ್ಥಗೊಳಿಸಲು ಸೂಚಿಸಿದರು. ಇನ್ನುಳಿದಂತೆ ಬಾಲ್ಯ ವಿವಾಹ ಕುರಿತಾದ ವಿಷಯ ಗಮನಕ್ಕೆ ಬಂದ ಕೂಡಲೇ ಸಾರ್ವಜನಿಕರು ತಡಮಾಡದೆ ಅಧಿಕಾರಿಗಳ ಗಮನಕ್ಕೆ ತರುವಂತೆ ಅಧಿಕಾರಿಗಳು ತಿಳಿಸಿದರು.