ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ವರದಿಯಾಗಿದೆ.
ಇದನ್ನೂ ಓದಿ : ಮೂಡಿಗೆರೆ : ರಾಷ್ಟ್ರ ಧ್ವಜಕ್ಕೆ ಅಪಮಾನ, ಚರಂಡಿಯಲ್ಲಿ ಪತ್ತೆಯಾದ ತ್ರಿವರ್ಣ ಧ್ವಜ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳುವಳ್ಳಿ ಗ್ರಾಮದ ಕೋರನಕುಡಿಗೆ ಕಿರಣ್ ಎಂಬುವವರ ಸ್ಟಾರ್ ಸಿಟಿ ಬೈಕ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ. ನಿನ್ನೆ ಮಧ್ಯಾಹ್ನ 2.30 ರ ಆಸುಪಾಸಿನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಎದುರು ಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ್ದು ಬೈಕ್ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಈ ಸಂದರ್ಭದಲ್ಲಿ ಮನೆಯ ಕಿಟಕಿಗಳಿಗೂ ಹಾನಿಯಾಗಿದ್ದು ಮನೆಯ ಮಾಲೀಕರಾದ ಕಿರಣ್ ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಪಕ್ಕದ ಮನೆಯವರು ಆತಂಕದಿಂದ ಬಂದು ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ಕೆಡಿಸಿದ್ದಾರೆ ಎನ್ನಲಾಗಿದ್ದು ಬೆಂಕಿಯ ಕೆನ್ನಾಲಿಗೆಗೆ ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಈ ಕುರಿತು ಶೃಂಗೇರಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಕಿರಣ್ ಆರೋಪಿಗಳನ್ನು ಶೀಘ್ರವೇ ಪತ್ತೆ ಮಾಡಿ ತಮಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಘಟನಾ ಸಂಬಂಧ ಶೃಂಗೇರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಈ ಸಂಬಂಧ ಮಾಹಿತಿ ಪಡೆಯುತ್ತಿದ್ದಾರೆ.
ಯಾವ ಕಾರಣಕ್ಕಾಗಿ ದುಷ್ಕರ್ಮಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎಂಬುದು ಪೊಲೀಸರ ಸಂಪೂರ್ಣ ತನಿಖೆಯ ನಂತರವಷ್ಟೇ ಹೊರಬೀಳಲಿದೆ.






0 Comments