ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಹನ್ನೊಂದು ತಿಂಗಳ ಮಗು ನೀರಿನ ತೊಟ್ಟಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಛಾಯಾಗ್ರಾಹಕ ದೇವರಾಜ್ ಹಾಗೂ ಅನುಷಾ ದಂಪತಿಯ ಮಗನಾದ ಅಕ್ಷಯ್ (11 ತಿಂಗಳು ) ಮನೆಯ ಮುಂದಿನ ತೊಟ್ಟಿಯಲ್ಲಿ ಬಿದ್ದು ಮೃತಪಟ್ಟಿರುವ ಹಸುಗೂಸು.

ಮುಂದಿನ ವಾರ ಮಗುವಿನ ಪ್ರಥಮ ವರ್ಷದ ಜನ್ಮದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಕುಟುಂಬವರ್ಗದವರು ಯೋಚಿಸಿದರು ಆದರೆ ವಿಧಿಯ ಆಟ ಎಂಬಂತೆ ಮಗುವಿನ ಸಾವಿನಿಂದ ಮನೆಯಲ್ಲೀಗ ಸಂಭ್ರಮ ಬದಲಾಗಿ ಸೂತಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಕೊಪ್ಪ: ಭೀಕರ ಅಗ್ನಿ ಅವಘಡ; ಅಂಗಡಿ ಸುಟ್ಟು ಭಸ್ಮ

ಈ ದುರಂತದಿಂದಾಗಿ ಊರಿನಲ್ಲಿ ಸ್ಮಶಾನ ಮೌನ ಆವರಿಸಿದ್ದು ನಿನ್ನೆ ಮಹಾಲಯ ಅಮವಾಸ್ಯೆ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಾಹನ ತೊಳೆಯಲು ಪೂಜೆ ಪುನಸ್ಕಾರದ ಕಡೆ ಗಮನ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಅಂಬೆಗಾಲು ಇಡುತ್ತಾ ಒಡಾಡುತ್ತಿದ್ದ ಮಗು ತನಗರಿವಿಲ್ಲದಂತೆ ತೊಟ್ಟಿಗೆ ಬಿದ್ದು ಸಾವನ್ನಪ್ಪಿದೆ. ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ವಾಹನ ತೊಳೆಯಲು ತೊಟ್ಟಿಯಲ್ಲಿ ಬಗ್ಗಿದಾಗ ಮಗುವನ್ನು ಕಂಡು ದಿಗ್ಭ್ರಾಂತರಾಗಿದ್ದಾರೆ. 


ತಕ್ಷಣ ಶಿಕಾರಿಪುರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದರೂ ಮಗುವಿನ ಆರೋಗ್ಯದಲ್ಲಿ ಯಾವುದೇ ಪ್ರಯೋಜನವಾಗಲಿಲ್ಲ. ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯಾಧಿಕಾರಿಗಳ ತಂಡ ಮಗುವಿನ ಕಳೆಬರಹವನ್ನು ಪೋಷಕರಿಗೆ ನೀಡುವಾಗ ಅಲ್ಲಿ ಸೇರಿದ್ದ ಜನಸ್ತೋಮ ಹಾಗೂ ಕುಟುಂಬಸ್ಥರ ಆಕ್ರಂದನ ನೆರೆದಿದ್ದ ಜನರ ಹೃದಯ ಹಿಂಡುತ್ತಿತ್ತು.

ಮೃತ ಮಗುವಿನ ಮೂರು ವರ್ಷದ ಅಕ್ಕ ನಕ್ಷತ್ರ ಹಾಗೂ ತಂದೆ ತಾಯಿಯ ದುಃಖ ಹೇಳತೀರದಾಗಿತ್ತು. 

ನಿನ್ನೆ ಸಂಜೆಯೇ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ವಿಧಿಗೆ ಹಿಡಿಶಾಪ ಹಾಕುತ್ತಾ ಊರಿನ ಗ್ರಾಮಸ್ಥರೂ ಭಾಗಿಯಾಗಿ ಆ ಪುಟ್ಟ ಮಗುವಿನ ಶವ ಸಂಸ್ಕಾರ ನಡೆಸಿದರು. ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.